ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ || Acharya Shri 108 Kamkumarnandi Maharaj

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಜು.6 ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಚಿಕ್ಕೋಡಿ ಪೊಲೀಸರು ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹುಡುಕಾಟ ಶುರು ಮಾಡಿದ್ದರು. ಈ ಹಿನ್ನಲೆ ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿದಾಗ ಹತ್ಯೆ ಬಗ್ಗೆ ಮಾಹಿತಿ ನೀಡಿದ್ದರು. ಇನ್ನು ಜೈನಮುನಿ ಮೃತದೇಹಕ್ಕಾಗಿ ಖಟಕಬಾವಿ ಗ್ರಾಮ ಸೇರಿ ವಿವಿಧೆಡೆ ರಾತ್ರಿಯೀಡಿ ಪೊಲೀಸರಿಂದ ಶೋಧ ಆರಂಭವಾಗಿದ್ದು, ಇಂದು ಕೂಡ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲು ನಿರ್ಧಾರ ಮಾಡಲಾಗಿದೆ.
