ಪುತ್ತೂರು: ಪುತ್ತೂರಿನಿಂದ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯವರೆಗೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಮುಳಿಯ ಶ್ಯಾಮ್ ಭಟ್ (81) ಅವರು ಅ.4ರಂದು ನಿಧನರಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪುತ್ತೂರಿನ ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಗೌರವವನ್ನು ಸಂಪಾದಿಸಿಕೊಂಡಿದ್ದ ಶ್ಯಾಮ್ ಭಟ್ ಅವರ ನಿಧನವು ಕುಟುಂಬಸ್ಥರು, ಬಂಧುಬಳಗ, ಸ್ನೇಹಿತರು ಹಾಗೂ ಹಿತೈಷಿಗಳಿಗೆ ಅಪಾರ ನೋವನ್ನುಂಟುಮಾಡಿದೆ. ದಶಕಗಳ ಕಾಲ ಆಭರಣ ಉದ್ಯಮ ಕ್ಷೇತ್ರದಲ್ಲಿ ಪ್ರಾಮಾಣಿಕತೆ, ನಂಬಿಕೆ ಮತ್ತು ಗುಣಮಟ್ಟಕ್ಕೆ ಮಹತ್ವ ನೀಡಿ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಬೆಳವಣಿಗೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.
ಪುತ್ತೂರು ಬಿಜೆಪಿ ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಮೃತರ ಅಂತಿಮ ದರ್ಶನ ಪಡೆದು, ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಮುಖರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದು, ಶ್ಯಾಮ್ ಭಟ್ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಸರಳತೆ, ಸೌಜನ್ಯ ಮತ್ತು ಉದ್ಯಮ ಕ್ಷೇತ್ರದ ಬದ್ಧತೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ಯಾಮ್ ಭಟ್ ಅವರ ಸೇವೆ ಮತ್ತು ವ್ಯಕ್ತಿತ್ವ ಸದಾ ಸ್ಮರಣೀಯವಾಗಿರಲಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಸ್ಥರು ಹಾಗೂ ಬಂಧುಬಳಗಕ್ಕೆ ಭಗವಂತ ಕರುಣಿಸಲಿ ಎಂದು ಬಿಜೆಪಿ ಮುಖಂಡರು ಪ್ರಾರ್ಥಿಸಿದರು.

