ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ದೀರ್ಘಕಾಲದ ಗಣನೀಯ ಸೇವೆ ಹಾಗೂ ಅಪಾರ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ರಾಜ್ಯ ಸಹಕಾರ ರತ್ನ ಪ್ರಶಸ್ತಿ’ಗೆ ಭಾಜನರಾಗಿದ್ದು, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹ–2026ರ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಹಾಗೂ ತುಳುನಾಡ ಸೂರ್ಯ ಪತ್ರಿಕೆಯ ಜಂಟಿ ಆಶ್ರಯದಲ್ಲಿ ನವೆಂಬರ್ 17ರಂದು ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದಲ್ಲಿ ಸಂಜೆ 3.30 ಕ್ಕೆ ನಡೆಯಲಿರುವ ರಾಜ್ಯಮಟ್ಟದ ಅದ್ದೂರಿ ‘ಸಹಕಾರಿ ಸಪ್ತಾಹ ಮತ್ತು ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಜಾಕೆ ಮಾಧವ ಗೌಡ ಅವರಿಗೆ ‘ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ–2026’ ಪ್ರದಾನ ಮಾಡಿ ಗೌರವಿಸಲಾಗುವುದು.
ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಹಿರಿಯ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಜಾಕೆ ಮಾಧವ ಗೌಡ ಅವರನ್ನು ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದೆ.

ಈ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದ ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ. ಸಹಕಾರ ಕ್ಷೇತ್ರದ ಸಾಧಕರಿಗೆ ಗೌರವ ಸಲ್ಲಿಸುವುದರ ಜೊತೆಗೆ ಸಹಕಾರಿ ಚಳವಳಿಯ ಮಹತ್ವ, ಅದರ ಸಾಮಾಜಿಕ ಜವಾಬ್ದಾರಿ ಮತ್ತು ಭವಿಷ್ಯದ ಬೆಳವಣಿಗೆಗಳ ಕುರಿತು ಚಿಂತನ-ಮಂಥನ ನಡೆಯಲಿದೆ.
ಸಹಕಾರದಿಂದ ಸಮೃದ್ಧಿ – ಸಹಭಾಗಿತ್ವದಿಂದ ಅಭಿವೃದ್ಧಿ ಎಂಬ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಕರಾವಳಿಯ ಸಹಕಾರಿ ಕ್ಷೇತ್ರಕ್ಕೆ ಹೊಸ ಪ್ರೇರಣೆ ನೀಡುವ ನಿರೀಕ್ಷೆಯಿದೆ.
ರಾಜ್ಯ ಸಹಕಾರ ರತ್ನ ಪ್ರಶಸ್ತಿಯನ್ನು ಪಡೆದ ಬೆನ್ನಲ್ಲೇ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಗೂ ಆಯ್ಕೆಯಾಗಿರುವ ಜಾಕೆ ಮಾಧವ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

