ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಹಾಗಾಗಿ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.
ಮಳೆಯ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿದ ಅವರು ಮಳೆ ಅನಾಹುತಗಳನ್ನು ನಿರ್ವಹಿಸಲು ಎಲ್ಲ ತಾಲೂಕು ಆಡಳಿತಗಳು ದಿನದ 24 ಗಂಟೆಗಳ ಕಾಲವೂ ಸಾರ್ವಜನಿಕರ ಸೇವೆಗೆ ಲಭ್ಯವಾಗ ಬೇಕು. ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು ಎಂದರು.
ದ.ಕ.ಜಿಲ್ಲೆಯಲ್ಲಿ ಗುಡ್ಡ ಕುಸಿತ, ಮಣ್ಣು ಜರಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈಗಾಗಲೇ ಗುರುತಿಸಿ ರುವ ಸಂಭಾವ್ಯ ಕುಸಿತ ಸ್ಥಳಗಳಲ್ಲಿ ನಿಗಾ ವಹಿಸಬೇಕು. ಅಗತ್ಯ ಬಿದ್ದರೆ ಮುಂಜಾಗ್ರತಾ ಕ್ರಮವಾಗಿ ಅಪಾಯದ ಸಾಧ್ಯತೆ ಇರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಬೇಕು. ಮಣ್ಣು ಜರಿಯುವ ಸಾಧ್ಯತೆಗಳಿರುವ ಸ್ಥಳಗಳಲ್ಲಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ಕ್ರಮ ಕೈಗೊಳ್ಳಬೇಕು. ಖಾಸಗಿ ಜಮೀನುಗಳಲ್ಲೂ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಯಂತಹ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆಯ ಭಾಗವಾಗಿ ಚಾರ್ಮಾಡಿ, ಸಂಪಾಜೆ, ಶಿರಾಡಿ ಸಹಿತ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಪ್ರಕರಣಗಳು ಸಂಭವಿಸಿದರೆ ಅವುಗಳನ್ನು ತೆರವುಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ದರ್ಶನ್ ಎಚ್.ವಿ. ಹೇಳಿದರು.


