ಪಡುಬಿದ್ರಿ: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಶೀಘ್ರವಾಗಿ ಮೇಲ್ದರ್ಜೆಗೇರಿಸಬೇಕು ಎಂದು ಆಗ್ರಹಿಸಿ ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪಡುಬಿದ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಜನರ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ವೈದ್ಯಕೀಯ ಹಾಗೂ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ. ಹೆಚ್ಚುತ್ತಿರುವ ಜನಸಂಖ್ಯೆ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಚ್ಚಿರುವ ವಾಹನ ಸಂಚಾರ ಹಾಗೂ ಆಗಾಗ್ಗೆ ಸಂಭವಿಸುವ ಅಪಘಾತಗಳ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸುಸಜ್ಜಿತ ಸರ್ಕಾರಿ ಆರೋಗ್ಯ ವ್ಯವಸ್ಥೆಯ ಅಗತ್ಯವಿದೆ ಎಂದು ತಿಳಿಸಲಾಯಿತು.
ಆರೋಗ್ಯ ಕೇಂದ್ರವನ್ನು ಕೂಡಲೇ ಮೇಲ್ದರ್ಜೆಗೇರಿಸಿ ಅಗತ್ಯ ಸಂಖ್ಯೆಯ ವೈದ್ಯರು, ನರ್ಸ್ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು. 24 ಗಂಟೆಗಳ ತುರ್ತು ಚಿಕಿತ್ಸಾ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಈ ಮನವಿಯನ್ನು ಸಂಬಂಧಪಟ್ಟ ಪಂಚಾಯತ್ ಪಿಡಿಒ, ಶಾಸಕರು, ಮಾಜಿ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು ಎಂದು ಒಕ್ಕೂಟದ ಪ್ರಮುಖರು ತಿಳಿಸಿದರು.
ಆಸಿಫ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೇವಕಿ ಬಾರ್ಕೂರ್, ಸಂಚಾಲಕ ಸಯ್ಯದ್ ನಿಜಾಮುದ್ದೀನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸರ್ವ ಒಕ್ಕೂಟದಿಂದ ಆಗ್ರಹ
RELATED ARTICLES

