ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಆಂತರಿಕ ಕಚ್ಚಾಟ ಆರಂಭಗೊಂಡಿದೆ. ಪಕ್ಷದ ಶಾಸಕರು, ಸಚಿವರೇ ಅಸಮಾಧಾನ ಹೊರಹಾಕುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಮನೆಯೊಂದು ನೂರು ಬಾಗಿಲಿನಂತೆ ಇದೆ ಎಂದ ಅವರು ರಾಜ್ಯದ ಜನರೇ ರಾಜ್ಯದ ಕಾಂಗ್ರೆಸ್ ಸರಕಾರ ಹೆಚ್ಚು ಸಮಯ ಬಾಳ್ವಿಕೆ ಬರುವುದಿಲ್ಲ ಎನ್ನುತ್ತಿದ್ದಾರೆ ಎಂದರು.
ಡಿ.ವಿ.ಸದಾನಂದ ಗೌಡ ಅವರು ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಕ್ಷೇತ್ರದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದರು. ಕುಟುಂಬ ಸದಸ್ಯರು ಅವರ ಜೊತೆಗಿದ್ದರು.
ದೇವಳದ ವತಿಯಿಂದ ಡಿ.ವಿ.ಸದಾನಂದ ಗೌಡ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ಭಟ್, ಶೋಭಾ ಗಿರಿಧರ್, ಶ್ರೀಕುಮಾರ್ ಬಿಲದ್ವಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.