ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ – ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ

ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು.

ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಫೆ. 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾಮಠದ ಮಠಾದಿಶ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಮಂಗಳೂರು ಶಾಖೆಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಶ್ವೇಶ್ವರೀಜೀ ಅವರು ಈಶ್ವರೀಯ ಸಂದೇಶ ನೀಡಲಿದ್ದಾರೆ. ಹಾಗೂ ಬೆಳ್ಳಗೆ ಕಡಬದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಯಲಿದ್ದು, ಬಳಿಕ ಆಧ್ಯಾತ್ಮಿಕ ಯಕ್ಷಗಾನ ತಾಳಮದ್ದಳೆ ಹಾಗೂ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಹರಪನ ಹಳ್ಳಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಸುಮಂಗಲಾ ಅವರು ಮಾತನಾಡಿ 1937 ರಲ್ಲಿ ಸ್ಥಾಪನೆಯಾಗಿ ವಿಶ್ವಾದ್ಯಂತ 110 ದೇಶಗಳಲ್ಲಿ ತನ್ನ ಶಾಖೆಗಳನ್ನು ಹೊಂದಿರುವ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಸ್ವ ಪರಿವರ್ತನೆಯಿಂದ ವಿಶ್ವ ಪರಿವರ್ತನೆ ಎನ್ನುವ ಧ್ಯೇಯ ವಾಕ್ಯವನ್ನು ಮೈಗೂಡಿಸಿಕೊಂಡು ವಿಶ್ವದಲ್ಲಿ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿನಿಧಿ ಡಾ|ಮಂಜುನಾಥ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.