ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ನೌಕರರ ಮುಷ್ಕರ : ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಪುತ್ತೂರು: ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದಕ್ಕೆ ಪುತ್ತೂರು ತಾಲೂಕು ಶಾಖೆಯಿಂದ ಬೆಂಬಲ ಸೂಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪುತ್ತೂರು ಅಧ್ಯಕ್ಷ ಶಿವಾನಂದ ಆಚಾರ್ಯ ಹೇಳಿದರು.
ಅವರು ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ರಾಜ್ಯ ಸರ್ಕಾರ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ- ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿ ಯಾವುದೇ ಪ್ರಸ್ತಾಪ ಮಾಡದಿರುವುದು ನೌಕರರಲ್ಲಿ ನಿರಾಶೆ ಮೂಡಿಸಿದೆ. 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022 ಜುಲೈ 1ರಿಂದ ಜಾರಿಗೊಳಿಸಬೇಕಿತ್ತು. ಸರ್ಕಾರ ಇದನ್ನು ಮಾಡದ ಹಿನ್ನಲೆಯಲ್ಲಿ ಫೆ.21ರಂದು ನೌಕರರ ಸಂಘದ ಜಿಲ್ಲೆ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷ ಪದಾಧಿಕಾರಿಗಳ ಸುಮಾರು 8ಸಾವಿರ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಭೆಯನ್ನು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ ಮಾಡಿದೆ ಎಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ., ಪುತ್ತೂರು ತಾಲೂಕು ಶಾಖೆಯ ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಕಾರ್ಯದರ್ಶಿ ಅಬ್ರಹಾಂ ಎಸ್. ಎ., ಉಪಾಧ್ಯಕ್ಷ ಹೊನ್ನಪ್ಪ ಗೌಡ ಉಪಸ್ಥಿತರಿದ್ದರು.
