ಮಂಗಳೂರು: ನ.21ರಂದು ಪುರಭವನದಲ್ಲಿ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಮ್ಮೇಳನವನ್ನು ನ.21ರಂದು ಬೆಳಿಗ್ಗೆ 10ಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಪತ್ರಕರ್ತರಿಗೆ ಕಿಟ್ ವಿತರಣೆ, ಶಾಸಕರಾದ ವೇದವ್ಯಾಸ್ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಡಾ.ವೈ ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ, ಹರೀಶ್ ಪೂಂಜಾ ಹಸಿರು ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಹಾಗೂ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮಧ್ಯಾಹ್ನ 12 ರಿಂದ ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವಡ ಅಧ್ಯಕ್ಷತೆಯಲ್ಲಿ ಗ್ರಾಮೀಣ ಪತ್ರಿಕೋಧ್ಯಮ – ಹೊಸ ಆಯಾಮ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ವಿಷಯ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 1 ರಿಂದ ಸಾಂಸ್ಕøತಿಕ ಕಾರ್ಯಕ್ರಮ, ಪ್ರತಿನಿಧಿ ನಮ್ಮೇಳನ, ಸಮಾರೋಪ ಸಮಾರಂಭ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು ಸ್ಪೀಕರ್ ಯು.ಟಿ. ಖಾದರ್ ಸನ್ಮಾನ ನೆರವೇರಿಸಲಿದ್ದಾರೆ. ಹಲವು ಗಣ್ಯರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಇದೇ ವೇಳೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.