ಮಂಗಳೂರು : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ವರ್ಗಾವಣೆ

ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಕಳೆದ ಎರಡು ವರ್ಷಗಳಿಂದ ಹಾಗೂ ಕೊರೊನಾದಂತಹ ಮಾರಕ ರೋಗದ ಸಂದರ್ಭದಲ್ಲಿ ಉತ್ತಮ ನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ತಕ್ಷಣದಿಂದಲೇ ಅಧಿಕಾರವಹಿಸುವಂತೆ ರಾಜ್ಯ ಸರ್ಕಾರ ಆದೇಶ ಮಾಡಿದೆ.ಹಿಂದೆ ಇದ್ದಂತಹ ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಅವರ ಸ್ಥಾನವನ್ನು ಇನ್ನು ಮುಂದೆ ಡಾ. ರಾಜೇಂದ್ರ ಕೆ.ವಿ ಅವರು ತುಂಬಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಜುಲೈ 30, 2020ರಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಬಳಿಕ ಕೋವಿಡ್ ಸಂಕಷ್ಟದ ಕಾಲ, ಜಲಪ್ರಳಯ, ಗಲಭೆಯಂತಹ ಸಂದಿಗ್ಧ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಹೆಗ್ಗಳಿಕೆ ಡಾ.ರಾಜೇಂದ್ರ ಕೆ.ವಿ ಅವರದ್ದಾಗಿದೆ.

ಡಾ.ರಾಜೇಂದ್ರ ಕೆ.ವಿ ಅವರಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನವನ್ನು ತುಂಬಲು ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಪ್ರಭಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.