ಮಿಲಾಗ್ರಿಸ್ ಪ.ಪೂ. ಕಾಲೇಜು : ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು.

ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇ. ಯೋಜನೆಯು ಪ್ರೇರಣೆ ನೀಡಲಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಜೀವನವನ್ನು ರೂಪಿಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್ರವರು ಎನ್.ಎಸ್.ಎಸ್ ಕಾರ್ಯಕರ್ತರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವನೆ ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿ, ಸಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಿಲಾಗ್ರಿಸ್ ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಉಪನಾಯಕ ಶಮನ್ ಮತ್ತು ಕಾರ್ಯದರ್ಶಿ ಝುಲ್ಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿರಣ್ ಡಿಸೋಜ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ನಾಯಕ ಅಹ್ಮದ್ ಶಾಕಿಬ್ ಖಾನ್ ವಂದಿಸಿ, ಮುಷ್ಫಿಕ್ ಅಹ್ಮದ್ ನಿರೂಪಿಸಿದರು.

Related Posts

Leave a Reply

Your email address will not be published.