ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು
ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.
‘ಭವಾನಿ ಯಾದವ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರತಿಷ್ಠಿತ ಕ್ರೀಡಾ ದತ್ತು ಯೋಜನೆ ಅಡಿಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರು ವಿಶ್ವವಿದ್ಯಾಲಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದ ಕ್ರೀಡಾಪಟು ಪದಕ ಪಡೆದಿದ್ದಾರೆ ಎಂದು ತಿಳಿಸಿದರು.
ಈ ಮೂಲಕ ಟ್ರ್ಯಾಕ್ ಮತ್ತು ಫೀಲ್ಡ್ ನಲ್ಲಿ ದೇಶಲ್ಲೆ ಪದಕ ತಂದುಕೊಟ್ಟ ಮೂರನೇ ಅಥ್ಲೀಟ್ ಎಂಬ ಹಿರಿಮೆಗೆ ಪಾತ್ರರಾದರು. ಅವರನ್ನು ಸ್ವಾತಂತ್ರ್ಯದ ದಿನ ಅಭಿನಂದಿಸಲಾಗುವುದು. ಜುಲೈನಲ್ಲಿ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ 6.44 ಮೀಟರ್ ಸಾಧನೆಯೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು ಎಂದು ತಿಳಿಸಿದರು.
ಚೀನಾದ ಚಾಂಗ್ಡುವಿನಲ್ಲಿ ಜುಲೈ 28 ರಿಂದ ಅಗಸ್ಟ್ 8 ರವರೆಗೆ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ- 2021ರಲ್ಲಿ ದೇಶದ 85 ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ 8 ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಈ ಬಾರಿ ರಾಷ್ಟ್ರೀಯ ಅಂತರ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ 12 ಪದಕಗಳನ್ನು ಪಡೆದಿದ್ದಾರೆ ಎಂದು ತಿಳಿಸಿದರು.
ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಕೋಚ್ ಅಜಿತ್ ಕುಮಾರ್ ಇದ್ದರು.