ಪಡುಬಿದ್ರಿ ಕೆಪಿಎಸ್ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ : ಪರಿಶೀಲನೆ

ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಡುಬಿದ್ರಿಯ ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಮೂಲಸೌಕರ್ಯಗಳಿಲ್ಲದೆ ನೆಲದಲ್ಲಿ ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಅಲ್ಲದೆ ಈ ಶಾಲೆಯ ಕಟ್ಟಡ ತೀರ ಹಳೆಯದಾಗಿದ್ದು, ನಾದುರಸ್ಥಿಯಲ್ಲಿದೆ. ಕೂಡಲೇ ಸೂಕ್ತ ಹೊಸ ಕಟ್ಟಡವನ್ನು ರಚಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪಡುಬಿದ್ರಿ ನೀಡಿದ ದೂರಿನ ಹಿನ್ನಲೆಯಲ್ಲಿ ಭೇಟಿ ನೀಡಿ ಶಾಲೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು.ಈ ವೇಳೆ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಗ್ರಾಮ ಪಂಚಾಯಿತಿ ಸದಸ್ಯ ಹೇಮಚಂದ್ರ ಹಾಗೂ ಶಾಲೆಯ ಮಕ್ಕಳ ಪೋಷಕರು ಅಧಿಕಾರಿಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳ ಸಂಖ್ಯೆ ಎಲ್‌ಕೆಜಿ ಹಾಗೂ ಯುಕೆಜಿಯಲ್ಲಿ ಕಳೆದ ಭಾರಿಗಿಂತ ಈ ಭಾರಿ ತೀರಾ ಕಡಿಮೆಯಾಗಿದೆ ಎಂದರು.
ಈ ವೇಳೆ ಶಾಲೆಯ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಇಲ್ಲಿನ ಅಭಿವೃದ್ಧಿಯ ಕುರಿತು ಹಾಗೂ ಇಲ್ಲಿನ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಎಲ್ಲಾ ಸಮಸ್ಯೆಗಳಿಗೆ ಪರಿಹಾರಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿಯ ಸಂಯೋಜಕ ಉಮಾ, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಪಡುಬಿದ್ರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕವಿತಾ, ಕೆಪಿಎಸ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಕೃಷ್ಣಯ್ಯ ಉಪಸ್ಥಿತರಿದ್ದರು.

Related Posts

Leave a Reply

Your email address will not be published.