ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಕರಿಗೆ ಪೊಲೀಸ್ ರಕ್ಷಣೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನೇತೃತ್ವದಲ್ಲಿ ಉತ್ಸವಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸಚಿವರು, ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳು, ಖ್ಯಾತ ಕಲಾ-ಸಾಂಸ್ಕೃತಿಕ ಮುಖಂಡರು, ಗಣ್ಯರು, ದೇಶ-ವಿದೇಶಗಳ ಲಕ್ಷಾಂತರ ಭಕ್ತರು ಸೇರಿ ಶಾಂತಿಯುತವಾಗಿ ಶೋಭಾಯಾತ್ರೆ ನಡೆಸುತ್ತಿದ್ದಾರೆ. ಪೊಲೀಸರ ಕಡೆಯಿಂದಲೂ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯ ಚೆಂಬರಿಕಾ ಸಂತೋಷ್ ಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಕೆ. ರಾಮಕುಮಾರ್ ಉಪಸ್ಥಿತರಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ ಗೃಹ ಇಲಾಖೆಯಿಂದ ವಿವರಣೆ ಕೇಳಿದೆ.