ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ : ಮಕ್ಕಳಿಂದ ಅಮೃತ ಶೋಭಾಯಾತ್ರೆ
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್ ಎನ್. ಗೌರ ಉಪಸ್ಥಿತರಿದ್ದರು. ವಿದ್ಯಾಕೇಂದ್ರದ ಶಿಶಿಮಂದಿರದಿಂದ ಮೊದಲ್ಗೊಂಡು ಪದವಿ ತರಗತಿವರೆಗಿನ ಸುಮಾರು 3 ಸಾವಿರ ವಿದ್ಯಾರ್ಥಿಗಳು ಅಮೃತ ಶೋಭಾಯಾತ್ರೆಯಲ್ಲಿ ತ್ರಿವರ್ಣ ಬಾವುಟ ಹಿಡಿದು ಹೆಜ್ಜೆ ಹಾಕಿದರು. ರಾಷ್ಟ್ರ ಭಕ್ತಿಯನ್ನು ಉದ್ದೀಪಿಸುವ ವಿವಿಧ ಸ್ತಬ್ದ ಚಿತ್ರಗಳು ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.