ಬಂಟ್ವಾಳ: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ

ಬಂಟ್ವಾಳ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನುನ ಆಗ್ರಹಿಸಿ ಮಾ. 1 ರಿಂದ ನಡೆಯುವ ಅನಿರ್ಧಿಷ್ಠಾವಧಿ ಮುಷ್ಕರದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯು ಬೆಂಬಲ ವ್ಯಕ್ತಪಡಿಸಿರುವುದಾಗಿ ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ತಿಳಿಸಿದರು.

ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ, ಫೆ.21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲೆ ತಾಲ್ಲೂಕು ಯೋಜನೆ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾ. 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಅಧಿಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾ. 1 ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ಕ್ಕೆ ಕರೆ ನೀಡಲು ನಿರ್ಣಯಕೈಗೊಂಡಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ತುಂಬೆ, ಕೋಶಾಧಿಕಾರಿ ಬಸಯ್ಯ ಅಲಿಮಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ಜನಾರ್ದನ್, ಪ್ರಮುಖರಾದ ಜೋಯಲ್ ಲೋಬೋ, ಯತೀಶ್ ಪಿ., ರತ್ನಾವತಿ ಪಿ., ಇಂದು ಶೇಖರ್, ಪುಟ್ಟ ರಂಗನಾಥ್, ಬಸವರಾಜು, ಮುಸ್ತಾಫ, ಜನಾರ್ದನ ಉಪಸ್ಥಿತರಿದ್ದರು.

Related Posts

Leave a Reply

Your email address will not be published.