ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಜನರಿಗೆ ಮಾಹಿತಿ, ಶಿಕ್ಷಣ ಕೊಡುವುದರ ಜೊತೆಗೆ ನಾಡಿನ ಅಭಿವೃದ್ಧಿ ಪರ ಚಿಂತನೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ನಾಡಿನ ಅಭಿವೃದ್ಧಿಗೆ ಪತ್ರಕರ್ತರು ತಮ್ಮ ಸಾಮರ್ಥ್ಯವನ್ನು ಬಳಸಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಉಪ ಸಂಪಾದಕ ಆರ್.ಸಿ.ಭಟ್ ಹೇಳಿದರು. ಪತ್ರಕರ್ತ ಅಭಿವೃದ್ಧಿಯ ಪರವಾದ ಹೋರಾಟಗಾರ ಆಗಬೇಕು. ಯಾವುದೇ ಸಿದ್ಧಾಂತದ ಹೋರಾಟಗಾರ ಆಗಬಾರದು. ಪತ್ರಕರ್ತರು ಸಿದ್ಧಾಂತದ ಪರ ಹೋರಾಟ ಮಾಡಿದರೆ ತಮ್ಮ ವೃತ್ತಿ ಮೌಲ್ಯವನ್ನು ಕಳೆದುಕೊಂಡಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ನಿರಂತರ ಪತ್ರಿಕೆಯ ಓದಿನಿಂದ ಮಾತ್ರ ಜ್ಞಾನವನ್ನು ವೃದ್ಧಿಸಲು ಸಾಧ್ಯ ಎಂದ ಅವರು ಮಾಧ್ಯಮ ಕ್ಷೇತ್ರವು ಕವಲು ದಾರಿಯಲ್ಲಿದೆ. ಪತ್ರಕರ್ತರು ಅತ್ಯಂತ ಜವಾಬ್ದಾರಿಯಿಂದ, ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಬ್ರಾಯ ಸಂಪಾಜೆ ಅವರನ್ನು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಸನ್ಮಾನಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆ ವಹಿಸಿದ್ದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
