ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆ
ನಗರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ – ಡ್ರೋನ್ ಹಾಗೂ ಸಿಸಿ ಕ್ಯಾಮರಾ ಮೂಲಕ ನಿಗಾ
ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಿನ್ನಲೆಯಲ್ಲಿ ಸುಳ್ಯ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿಯುತ ಜಾತ್ರೋತ್ಸವ ನಡೆಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸೂಕ್ಷ್ಮ ಕಣ್ಗಾವಲು ವ್ಯವಸ್ಥೆಯ ಭಾಗವಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಬಾರಿ ಡ್ರೋನ್ ಬಳಸಿ ನಿರಂತರ ವೀಕ್ಷಣೆ ನಡೆಸಲಾಗುತ್ತಿದೆ. ಜೊತೆಗೆ ನಗರದಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಗಾವಲು ಇರಿಸಲಾಗಿದೆ.
ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಅಲ್ಲಲ್ಲಿ ಪೊಲೀಸ್ ತಂಡಗಳು ಹಾಗೂ ಮಫ್ತಿ ತಂಡಗಳನ್ನು ನಿಯೋಜಿಸಲಾಗಿದ್ದು, ವಿಶೇಷವಾಗಿ ಕಳ್ಳತನ ತಡೆಗೆ ಹೆಚ್ಚಿನ ಗಮನ ನೀಡಲಾಗಿದೆ. ಜಾತ್ರೋತ್ಸವಕ್ಕೆ ಆಗಮಿಸುವ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಹಾಗೂ ಮಹಿಳೆಯರು, ಅನಗತ್ಯವಾಗಿ ಚಿನ್ನಾಭರಣ ಧರಿಸಿ ಬರದಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ವಾಹನ ಸಂಚಾರ ಸುಗಮವಾಗಿಸುವ ಉದ್ದೇಶದಿಂದ ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಪ್ರಭು ಗ್ರೌಂಡ್, ಎಪಿಎಂಸಿ ಗ್ರೌಂಡ್, ಗಾಂಧಿನಗರ ಶಾಲಾ ಮೈದಾನ ಸೇರಿದಂತೆ ಇತರೆ ನಿಗದಿತ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ತಕ್ಷಣ 112 ಗೆ ಕರೆ ಮಾಡುವಂತೆ ಸುಳ್ಯ ಉಪನಿರೀಕ್ಷಕ ಸಂತೋಷ್ ಬಿ.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















