ಉಡುಪಿ: ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ.


ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಇರಲಿದ್ದು, ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮುಖ್ಯವಾಗಿ ಆಳಸಮುದ್ರ ಮೀನುಗಾರರು ಮೀನುಗಾರಿಕೆ ನಡೆಸುವಾಗ ಜಾಗರೂಕತೆ ವಹಿಸಬೇಕು ಎಂದು ಎಚ್ಚರಿಕೆ ಸಂದೇಶ ನೀಡಿದೆ