HomeFresh Newsಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಭವ್ಯ ಕಂಚಿನ ಪುತ್ಥಳಿ ಸೆಪ್ಟೆಂಬರ್ 25ರಂದು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಅನಾವರಣಗೊಳ್ಳಲಿದೆ.
ಅಷ್ಟಮಂಗಲ ಪ್ರಶ್ನೆಯಲ್ಲಿ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸುವಂತೆ ತೋರಿ ಬಂದ ಹಿನ್ನೆಲೆಯಲ್ಲಿ ಮೊಗವೀರ ಸಮಾಜ ಬಾಂಧವರ ಸಂಕಲ್ಪದಂತೆ ಸುಮಾರು ₹3 ಕೋಟಿ ವೆಚ್ಚದಲ್ಲಿ, 31 ಅಡಿ ಎತ್ತರ ಹಾಗೂ ಸುಮಾರು 14 ಸಾವಿರ ಕೆ.ಜಿ. ತೂಕದ ಕಂಚನ್ನು ಬಳಸಿ ಈ ಭವ್ಯ ಪುತ್ಥಳಿಯನ್ನು ನಿರ್ಮಿಸಲಾಗಿದೆ.
ಮೊಗವೀರ ಸಮಾಜದ ಏಕತೆ, ಗುರುಭಕ್ತಿ ಹಾಗೂ ಗುರು ಪರಂಪರೆಯ ಭವ್ಯತೆಯ ಪ್ರತೀಕವಾಗಿ ಈ ಪುತ್ಥಳಿ ಮುಂದಿನ ಪೀಳಿಗೆಗೆ ಸಂದೇಶ ಸಾರಲಿದೆ.
ಸೆಪ್ಟೆಂಬರ್ 25ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ಕಂಚಿನ ಪುತ್ಥಳಿ ಅನಾವರಣ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ನೂತನ ವಿದ್ಯಾರ್ಥಿ ನಿಲಯ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರು ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಗುರಿಕಾರರಿಗೆ ಗೌರವಧನ ವಿತರಿಸಲಿದ್ದು, ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ (IAS), ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಉದ್ಯಮಿಗಳಾದ ಆನಂದ ಸಿ. ಕುಂದರ್, ಪ್ರಸಾದ್ ರಾಜ್ ಕಾಂಚನ್ ಸೇರಿದಂತೆ ಸಮಾಜದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಮುಂಬೈ ಸೇರಿದಂತೆ ವಿವಿಧ ಮೊಗವೀರ ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳಾ ಸಂಘಗಳ ಪ್ರತಿನಿಧಿಗಳು, ಮೀನುಗಾರಿಕಾ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಕರಾವಳಿ ಕರ್ನಾಟಕದ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಐತಿಹಾಸಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಆಗಮಿಸಿ ಯಶಸ್ವಿಗೊಳಿಸುವಂತೆ ಪತ್ರಿಕೆ ಪ್ರಕಟನೆಯಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲ ಮನವಿ ಮಾಡಿದೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments